
ಬಿಡದಿ ಟೌನ್‌ಶಿಪ್ ವಿವಾದ: 20ಕ್ಕೂ ಹೆಚ್ಚು ರೈತರ ವಿರುದ್ಧ ಎಫ್‌ಐಆರ್, ಜೆಎಂಸಿ ಸರ್ವೇ ತಾತ್ಕಾಲಿಕ ಸ್ಥಗಿತ
ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪಗಳಡಿ ತನಿಖೆ ಆರಂಭಿಸಿದ್ದಾರೆ.
ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಜೆಎಂಸಿ (ಜಾಯಿಂಟ್ ಮೆಷರ್‌ಮೆಂಟ್ ಸರ್ವೇ) ತಂಡ ನಡೆಸುತ್ತಿದ್ದ ಸರ್ವೇ ಕಾರ್ಯಕ್ಕೆ ಅಡ್ಡಿಪಡಿಸಿ, ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಡಿ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದ ಜಿಲ್ಲಾಡಳಿತ ಸದ್ಯಕ್ಕೆ ಸರ್ವೇ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಕಂದಾಯ ಇಲಾಖೆಯ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪಗಳಡಿ ತನಿಖೆ ಆರಂಭಿಸಿದ್ದಾರೆ.
ಸರ್ವೇ ವೇಳೆ ಉದ್ವಿಗ್ನ ಪರಿಸ್ಥಿತಿ
ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಜೆಎಂಸಿ ತಂಡ ಭೂ ಸರ್ವೇ ನಡೆಸಲು ತೆರಳಿದ ವೇಳೆ ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದರು. ಸರ್ವೇ ಕಾರ್ಯಕ್ಕೆ ಅವಕಾಶ ನೀಡದ ರೈತರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದು, ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ವೇಳೆ ಕೆಲ ಅಧಿಕಾರಿಗಳ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದ್ದು, ಅದರ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆ
ಪ್ರಕರಣ ದಾಖಲಾಗಿದ್ದರೂ ರೈತರು ತಮ್ಮ ಹೋರಾಟದಿಂದ ಹಿಂದೆ ಸರಿಯುವ ಲಕ್ಷಣಗಳು ಕಾಣುತ್ತಿಲ್ಲ. ಯೋಜನಾ ವ್ಯಾಪ್ತಿಯ ಹಲವು ಗ್ರಾಮಗಳ ರೈತರು, ಜೆಎಂಸಿ ಸರ್ವೇ ಮತ್ತೆ ಆರಂಭಿಸಿದರೆ ಪುನಃ ತಡೆಯೊಡ್ಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬಿಡದಿ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ.
ಸರ್ವೇಗೆ ತಾತ್ಕಾಲಿಕ ಬ್ರೇಕ್
ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಜಿಲ್ಲಾಡಳಿತ ಜೆಎಂಸಿ ಸರ್ವೇಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ರೈತರೊಂದಿಗೆ ಮತ್ತಷ್ಟು ಮಾತುಕತೆ ನಡೆಸಿ ಒಮ್ಮತದ ಮೂಲಕ ಸರ್ವೇ ಪುನರಾರಂಭಿಸಲು ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇದೇ ವೇಳೆ ಯೋಜನೆಗೆ ಬೆಂಬಲ ವ್ಯಕ್ತಪಡಿಸಿರುವ ರೈತರ ಜಮೀನುಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯೊಂದಿಗೆ ಸರ್ವೇ ನಡೆಸುವ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಅಗತ್ಯವಿದ್ದರೆ ಹೆಚ್ಚುವರಿ ಪೊಲೀಸ್ ಪಡೆಯನ್ನೂ ನಿಯೋಜಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಭೂಸ್ವಾಧೀನಕ್ಕೆ ರೈತರ ತೀವ್ರ ವಿರೋಧ
ಬಿಡದಿ ಟೌನ್‌ಶಿಪ್ ಯೋಜನೆ ಘೋಷಣೆಯಾದ ದಿನದಿಂದಲೇ ಭೂಸ್ವಾಧೀನ, ಪರಿಹಾರದ ಮೊತ್ತ ಹಾಗೂ ರೈತರ ಹಿತಾಸಕ್ತಿ ಕುರಿತಾಗಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರ ಅಭಿವೃದ್ಧಿ ಯೋಜನೆಯ ಭಾಗವಾಗಿ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸುತ್ತಿದ್ದರೆ, ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿ ರೈತರು ಹೋರಾಟ ತೀವ್ರಗೊಳಿಸಿದ್ದಾರೆ. ಇದರ ನಡುವೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿದಂತೆ ಜೆಡಿಎಸ್ ನಾಯಕರು ಕೂಡ ರೈತರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಕ್ರಮವನ್ನು ವಿರೋಧಿಸಿದ್ದಾರೆ.

